ಬೆಂಗಳೂರು:
ಲಾಕ್‍ಡೌನ್ ಜಾರಿ ಮಾಡುವ ನಿರ್ಧಾರದಿಂದ ಹಿಂದೆ ಸರಿದಿರುವ ರಾಜ್ಯ ಸರ್ಕಾರ ಒಂದು ರೀತಿ ಸೆಮಿ ಲಾಕ್‍ಡೌನ್ ಮಾದರಿಯಲ್ಲಿ ಓಮಿಕ್ರಾನ್ ಸೋಂಕನ್ನು ಪ್ರಾರಂಭದಲ್ಲೇ ಚಿವುಟಿ ಹಾಕಲು ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿಂದು ಕಂದಾಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಬಿಬಿಎಂಪಿ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸೇರಿದಂತೆ ಉನ್ನತ ಅಧಿಕಾರಿಗಳ ಸಭೆ ನಡೆಸಲಾಯಿತು.
ಸಚಿವರಾದ ಆರ್.ಅಶೋಕ್, ಡಾ.ಕೆ.ಸುಧಾಕರ್, ಡಾ.ಅಶ್ವತ್ಥ್ ನಾರಾಯಣ್, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರಾದ ಡಾ.ಸಿ.ಎನ್.ಮಂಜುನಾಥ್, ಡಾ.ಸುದರ್ಶನ್ ಬಲ್ಲಾಳ್, ಡಾ.ದೇವಿಶೆಟ್ಟಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಸಿ.ಎಸ್.ರವಿಕುಮಾರ್, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕೆಐಎಬಿ ಕೋವಿಡ್ ನೋಡಲ್ ಅಧಿಕಾರಿ, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರು, ಕಂದಾಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಬಿಬಿಎಂಪಿ ಆಯುಕ್ತರು ಸೇರಿದಂತೆ ಮತ್ತಿತರ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘವಾಗಿ ನಡೆದ ಸಭೆಯಲ್ಲಿ ಮಹಾಮಾರಿ ಓಮಿಕ್ರಾನ್ ಸೋಂಕು ರಾಜ್ಯದಲ್ಲಿ ಹಬ್ಬುವುದನ್ನು ತಡೆಗಟ್ಟಲು ಯಾವೆಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಯಿತು. ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪಾಸಿಟಿವ್ ಕಂಡುಬಂದರೆ ಕಡ್ಡಾಯವಾಗಿ ಜಿನೋಮಿಕ್ ಸೀಕ್ವೆನ್ಸ್‍ಗೆ ಒಳಪಡಿಸುವುದು, ಕಳೆದ 14 ದಿನಗಳ ಹಿಂದೆ ರಾಜ್ಯಕ್ಕೆ ಆಗಮಿಸಿರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯವಾಗಿ ಆರ್‍ಟಿಪಿಸಿಆರ್‍ಗೆ ಒಳಪಡಿಸಬೇಕೆಂದು ತಜ್ಞರು ಸಲಹೆ ಮಾಡಿದ್ದಾರೆ.
ಬೌರಿಂಗ್, ಕೆಸಿ ಜನರಲ್ ಸೇರಿದಂತೆ ಜಿಲ್ಲಾಸ್ಪತ್ರೆಗಳಲ್ಲಿ ಓಮಿಕ್ರಾನ್ ಚಿಕಿತ್ಸೆಗೆ ಪ್ರತ್ಯೇಕ ವಾರ್ಡ್‍ಗಳನ್ನು ತೆರೆಯುವುದು, ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ರೋಗ ಲಕ್ಷಣವುಳ್ಳ ಪ್ರಯಾಣಿಕರಿಗೆ ಪ್ರತ್ಯೇಕ ಚಿಕಿತ್ಸೆ ನೀಡಬೇಕೆಂದು ಶಿಫಾರಸು ಮಾಡಲಾಗಿದೆ.
ಸರ್ಕಾರಿ ಸವಲತ್ತುಗಳಾದ ವಿದ್ಯುತ್, ನೀರು, ಗ್ಯಾಸ್, ಪೆಟ್ರೋಲ್, ಡೀಸೆಲ್, ಸಂಬಳ, ಪಿಂಚಣಿ ಸೇರಿದಂತೆ ಮತ್ತಿತರ ಸವಲತ್ತುಗಳನ್ನು ಪಡೆಯಬೇಕಾದರೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಲಸಿಕೆ ಪಡೆಯಲೇಬೇಕೆಂಬ ನಿಯಮವನ್ನು ಜಾರಿ ಮಾಡಬೇಕೆಂದು ಸಲಹೆ ಮಾಡಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡುವವರಿಗೆ ಎರಡು ಡೋಸ್ ಲಸಿಕೆ ಕಡ್ಡಾಯ, ಮೆಟ್ರೋ ರೈಲು, ಶಾಪಿಂಗ್ ಕಾಂಪ್ಲೆಕ್ಸ್, ಮಾಲ್‍ಗಳು, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಮಾರುಕಟ್ಟೆ, ಸಂತೆ ಮೈದಾನ ಸೇರಿದಂತೆ ಮತ್ತಿತರ ಕಡೆ ಬಿಗಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಲಾಗಿದೆ.
ಬಿಗಿ ಕ್ರಮ: ಕರ್ನಾಟಕದ ಜತೆಗೆ ಗಡಿ ಪ್ರದೇಶಗಳನ್ನು ಹಂಚಿಕೊಂಡಿರುವ ಕೇರಳ ಮತ್ತು ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಹೆಚ್ಚಿನ ತಪಾಸಣೆ ನಡೆಸಬೇಕು. ಎರಡು ಡೋಸ್ ಲಸಿಕೆ ಪಡೆಯದಿದ್ದರೆ ಅಂತಹವರನ್ನು ರಾಜ್ಯಕ್ಕೆ ಪ್ರವೇಶ ನೀಡದಂತೆ ನಿರ್ಬಂಧ ಹಾಕಬೇಕು ಎಂದು ತಾಂತ್ರಿಕ ಸಲಹಾ ಸಮಿತಿ ಸಿಎಂಗೆ ಮನವಿ ಮಾಡಿದೆ.